ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಕೊಡಗಿನ ಜನರ ಸಂಕಷ್ಟಗಳಿಗೆ ಮಾನವೀಯತೆಯಿಂದ ಸ್ಪಂದಿಸಿ: ಮುಖ್ಯಮಂತ್ರಿ

ಗೃಹ ಕಚೇರಿ ಕೃಷ್ಣಾ (ಬೆಂಗಳೂರು), ಫೆಬ್ರವರಿ 16, 2019

-ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಹಾಗೂ ಭೂ ಕುಸಿತದಿಂದ ಕಂಗೆಟ್ಟಿರುವ ಕೊಡಗಿನ ಜನರ ಸಮಸ್ಯೆಗಳಿಗೆ ಮಾನವೀಯತೆಯಿಂದ ಸ್ಪಂದಿಸುವಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

-ಅವರು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಕೊಡಗು ಪುನರ್ ನಿರ್ಮಾಣ, ಪುನರ್ವಸತಿ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

-ಸಂಪೂರ್ಣ ಹಾನಿಗೊಳಗಾಗಿರುವ 500 ಹಾಗೂ ಅಪಾಯದ ಅಂಚಿನಲ್ಲಿರುವ 662 ಮನೆಗಳನ್ನು ಗುರುತಿಸಲಾಗಿದ್ದು, ಈಗಾಗಲೇ 840 ಮನೆಗಳನ್ನು ನಿರ್ಮಿಸಲಾಗುತ್ತಿದೆ. ಇನ್ನೂ ಯಾರಾದರೂ ಫಲಾನುಭವಿಗಳು ಬಿಟ್ಟುಹೋಗಿದ್ದರೆ ಈ ಬಗ್ಗೆ ಪರಿಣತರಿಂದ ಸಮೀಕ್ಷೆ ನಡೆಸಿ ಗುರುತಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

-ಈ ಸಂದರ್ಭದಲ್ಲಿ ಶಾಸಕರಾದ ಕೆ.ಜಿ. ಬೋಪಯ್ಯ, ಅಪ್ಪಚ್ಚು ರಂಜನ್ ಮತ್ತು ವೀಣಾ ಅಚ್ಚಯ್ಯ ಅವರು ಬೆಳೆಹಾನಿಗೆ ಪರಿಹಾರ ಎರಡು ಹೆಕ್ಟೇರ್ ವರೆಗೆ ಮಾತ್ರ ನೀಡಲು ಎನ್ ಡಿ ಆರ್ ಎಫ್ ಮಾರ್ಗಸೂಚಿಯಲ್ಲಿ ಅವಕಾಶವಿದೆ. ಆದರೆ ಈ ಬಾರಿ ಭೂಕುಸಿತದಿಂದ ಜಮೀನು ನಾಶವಾಗಿರುವುದರಿಂದ ಹೆಚ್ಚಿನ ಪರಿಹಾರ ನೀಡುವಂತೆ ಸಲಹೆ ನೀಡಿದರು. ಈ ಕುರಿತು ಸ್ಪಂದಿಸಿದ ಮುಖ್ಯಮಂತ್ರಿಗಳು, ಜನಪ್ರತಿನಿಧಿಗಳು, ನಾಗರಿಕರೊಂದಿಗೆ ಚರ್ಚಿಸಿ ಸೂಕ್ತ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

-ಅಂತೆಯೇ ಪ್ರವಾಸೋದ್ಯಮ ಚಟುವಟಿಕೆಗಳಿಗೆ ಪೂರಕವಾಗಿ ಭೂ ಪರಿವರ್ತನೆಯ ಪ್ರಕ್ರಿಯೆಯನ್ನು ಸರಳಗೊಳಿಸುವ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ತಿಳಿಸಿದರು.

-ಪ್ರಾಧಿಕಾರದ ವತಿಯಿಂದ ಜನರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಕೈಗೊಳ್ಳಬಹುದಾದ ಕಾರ್ಯಕ್ರಮಗಳ ಕುರಿತು ಸವಿವರವಾದ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.

-ಸಭೆಯಲ್ಲಿ ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್, ವಸತಿ ಸಚಿವ ಎಂ.ಟಿ.ಬಿ. ನಾಗರಾಜ್, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

*********************************