ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಮಂಡ್ಯ ಜಿಲ್ಲೆಯ 5 ಸಾವಿರ ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯ ಮಂತ್ರಿಗಳಿಂದ ಚಾಲನೆ

(ಮಂಡ್ಯ), ಫೆಬ್ರವರಿ 27, 2019

-5 ಸಾವಿರ ಕೋಟಿ ರೂ.ಗಳ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದ್ದು, ಮನೆಯ ಮಗನಾಗಿ ಈ ಜಿಲ್ಲೆಯ ಜನತೆಯ ಋಣವನ್ನು ತೀರಿಸಲು ಪ್ರಯತ್ನಿಸಿದ್ದೇನೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ತಿಳಿಸಿದರು.

-ಅವರು ನಗರದ ಸರ್ಕಾರಿ ಮಹಾವಿದ್ಯಾಲಯದ ಆವರಣದಲ್ಲಿ ನಡೆದ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನಾ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು.

-ಜಿಲ್ಲೆಯ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಇಂದು ಅಧಿಕೃತವಾಗಿ ಚಾಲನೆ ನೀಡಿದ್ದು, ಇನ್ನೂ ಹೆಚ್ಚಿನ ಅನುದಾನ ನೀಡುವ ಮೂಲಕ ಮಾದರಿ ಜಿಲ್ಲೆಯಾಗಿ ರೂಪಿಸುವುದಾಗಿ ತಿಳಿಸಿದ ಅವರು ನಾನು ಕೇವಲ ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ಮಾತ್ರ ಒತ್ತು ನೀಡಿಲ್ಲ. ನಾನು ಯಾವುದೋ ಒಂದು ಭಾಗಕ್ಕೆ ಮಾತ್ರ ಮುಖ್ಯಮಂತ್ರಿಯಲ್ಲ, ಇಡೀ ನಾಡಿನ ಮುಖ್ಯಮಂತ್ರಿಯಾಗಿದ್ದು, ಇಡೀ ರಾಜ್ಯವನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯುವ ಪ್ರಯತ್ನ ಮಾಡುತ್ತಿದ್ದೇನೆ ಎಂದು ಹೇಳಿದರು.

-ಮೈಸೂರು ಸಕ್ಕರೆ ಕಾರ್ಖಾನೆಯ ಪುನಶ್ಚೇತನಕ್ಕಾಗಿ ಎಲ್ಲಾ ಸರ್ಕಾರಗಳು 340 ಕೋಟಿ ರೂ. ನೀಡಿವೆ. ಈ ಹಿನ್ನೆಲೆಯಲ್ಲಿ ಪುನಶ್ಚೇತನ ಮಾಡುವುದನ್ನು ಬಿಟ್ಟು ಸುಮಾರು 450 ಕೋಟಿ ರೂ.ಗಳಲ್ಲಿ ಹೊಸ ಕಾರ್ಖಾನೆ ಸ್ಥಾಪಿಸಲು ನಿರ್ಧರಿಸಿದ್ದು, ಬರುವ ಏಪ್ರಿಲ್ ಅಥವಾ ಮೇ ಮೊದಲ ವಾರದಲ್ಲಿ ಶಂಕುಸ್ಥಾಪನೆ ಮಾಡುತ್ತೇನೆ. ಇದಕ್ಕೆ ಮೊದಲ ಹಂತವಾಗಿ 100 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿರುವುದಾಗಿ ಅವರು ತಿಳಿಸಿದರು.

-ಪಿಎಸ್ಎಸ್ಕೆ ಕಾರ್ಖಾನೆಯ ಮೇಲೆ 42 ಸಾವಿರ ಕೋಟಿ ರೂ. ಸಾಲ ಇದೆ. ಅದನ್ನೂ ಸಹ ಪ್ರಾರಂಭಿಸಲು ಅಧಿಕಾರಿಗಳ ಜೊತೆ ಸಭೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ. ನಿಮ್ಮ ಆಶೀರ್ವಾದದಿಂದ ಮುಖ್ಯಮಂತ್ರಿಯಾಗಿ ಇಂದು ಜಿಲ್ಲೆಯ ಅಭಿವೃದ್ಧಿಗೆ ಚಾಲನೆ ನೀಡಿದ್ದೇನೆ. ಜಿಲ್ಲೆಯ ಅಭಿವೃದ್ಧಿ ಬಗ್ಗೆ ನನ್ನ ಹೃದಯದಲ್ಲಿ ಗುರಿ ಇಟ್ಟುಕೊಂಡಿದ್ದೇನೆ. ನನ್ನ ಉಸಿರಿರುವವರೆಗೂ ಜಿಲ್ಲೆಯ ಅಭಿವೃದ್ಧಿಗೆ ಒತ್ತು ನೀಡುತ್ತೇನೆ ಎಂದರು.

-ಮಂಡ್ಯ ಕ್ಷೇತ್ರದ ಶಾಸಕ ಎಂ.ಶ್ರೀನಿವಾಸ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಸಚಿವರಾದ ಸಿ.ಎಸ್. ಪುಟ್ಟರಾಜು, ಡಿ.ಸಿ.ತಮ್ಮಣ್ಣ, ಸಾ.ರಾ. ಮಹೇಶ್, ವಿಧಾನ ಪರಿಷತ್ ಮಾಜಿ ಉಪಸಭಾಪತಿ ಮರಿತಿಬ್ಬೇಗೌಡ, ಶಾಸಕರಾದ ಕೆ.ಸುರೇಶ್ಗೌಡ, ಕೆ.ಸಿ.ನಾರಾಯಣಗೌಡ, ಡಾ. ಕೆ.ಅನ್ನದಾನಿ, ಕೆ.ಟಿ.ಶ್ರೀಕಂಠೇಗೌಡ, ಜಿಪಂ ಅಧ್ಯಕ್ಷೆ ನಾಗರತ್ನ ಸ್ವಾಮಿ, ಜಿಲ್ಲಾಧಿಕಾರಿ ಎನ್.ಮಂಜುಶ್ರೀ ಇತರರು ಉಪಸ್ಥಿತರಿದ್ದರು.

*********************************