ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಬರ ಪರಿಹಾರ: ವಿರೋಧ ಪಕ್ಷದ ನಾಯಕರದ್ದು ಇಬ್ಬಗೆ ನೀತಿ - ಮುಖ್ಯಮಂತ್ರಿ

(ಬೆಂಗಳೂರು), ಏಪ್ರಿಲ್ 30, 2019

-ರಾಜ್ಯವು ಬರದಿಂದ ತತ್ತರಿಸುವಾಗ ರಾಜ್ಯ ಸರ್ಕಾರ ಮೋಜು ಮಸ್ತಿಯಲ್ಲಿ ಮೈಮರೆತಿದೆ ಎಂದು ಮಾನ್ಯ ವಿರೋಧ ಪಕ್ಷದ ನಾಯಕರು ಮಾಡಿರುವ ಟೀಕೆ ಹಾಸ್ಯಾಸ್ಪದ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

-ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯ ಹಿನ್ನೆಲೆಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಟೆಂಡರ್ ಕರೆಯಲು ಅನುಮತಿ ನೀಡಬಾರದು ಎಂದು ಮುಖ್ಯ ಚುನಾವಣಾಧಿಕಾರಿಗಳಿಗೆ ಪತ್ರ ಬರೆದಿರುವ ಯಡಿಯೂರಪ್ಪನವರು ಈ ರೀತಿ ಟೀಕೆ ಮಾಡಿರುವುದು ಅವರ ನಿರಂತರ ಇಬ್ಬಗೆ ನೀತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟಿದ್ದಾರೆ.

-ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದಾಗಲೂ ಮುಖ್ಯ ಕಾರ್ಯದರ್ಶಿಗಳು ಎಲ್ಲ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳೊಂದಿಗೆ ಸಮನ್ವಯ ಸಾಧಿಸಿ ಸಮಸ್ಯೆಗಳ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಂಡಿದ್ದಾರೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಅತ್ಯುತ್ತಮ ಅಧಿಕಾರಿಗಳಿದ್ದು ಅವರು ಈ ಅವಧಿಯಲ್ಲಿ ದಕ್ಷತೆಯಿಂದ ಕಾರ್ಯ ನಿರ್ವಹಿಸಿದ್ದಾರೆ. ಬರ ಪರಿಹಾರ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ ಮುಖ್ಯ ಕಾರ್ಯದರ್ಶಿಗಳು ನಿಯಮಿತವಾಗಿ ಮಾಹಿತಿಯನ್ನೂ ನೀಡಿದ್ದಾರೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

-ನಿನ್ನೆ ಉಡುಪಿಗೆ ತೆರಳುವ ಮುನ್ನ ಮುಖ್ಯ ಕಾರ್ಯದರ್ಶಿಯವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಅಗತ್ಯ ಸೂಚನೆಗಳನ್ನು ನೀಡಿದ್ದೇನೆ. ಮಾಧ್ಯಮಗಳಲ್ಲಿ ಈ ಕುರಿತು ಪ್ರಕಟವಾಗಿರುವ ವರದಿಗಳನ್ನು ಯಡಿಯೂರಪ್ಪ ಅವರು ಗಮನಿಸಿಲ್ಲ ಎನಿಸುತ್ತದೆ ಎಂದು ಅವರು ಹೇಳಿದ್ದಾರೆ.

-ರಾಜ್ಯದಲ್ಲಿ ಆರೋಗ್ಯ ಪ್ರವಾಸೋದ್ಯಮ ಪ್ರವರ್ಧಮಾನಕ್ಕೆ ಬರುತ್ತಿದ್ದು ಅಂತಹ ಒಂದು ಕೇಂದ್ರದಲ್ಲಿ ತಾವು ಚಿಕಿತ್ಸೆ ಪಡೆಯುತ್ತಿದ್ದು, ಯಡಿಯೂರಪ್ಪನವರು ಕೇವಲ ಸುದ್ದಿಗಾಗಿ ಇಂತಹ ಹೇಳಿಕೆಗಳನ್ನು ನೀಡುವ ಪ್ರವೃತ್ತಿಯನ್ನು ಕೈಬಿಡುವುದು ಒಳಿತು ಇಂದು ಅವರು ಅಭಿಪ್ರಾಯಪಟ್ಟಿದ್ದಾರೆ.

*********************************