ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಗ್ರಾಮಗಳಿಗೆ ಕಡ್ಡಾಯವಾಗಿ ಭೇಟಿ ನೀಡಲು ಮುಖ್ಯಮಂತ್ರಿ ಸೂಚನೆ

ಗೃಹ ಕಚೇರಿ ಕೃಷ್ಣಾ (ಬೆಂಗಳೂರು), ಮೇ 15, 2019

-ಕುಡಿಯುವ ನೀರು ಸರಬರಾಜು ಹಾಗೂ ಜಾನುವಾರುಗಳಿಗೆ ಮೇವು ಸರಬರಾಜನ್ನು ಖಾತರಿ ಪಡಿಸಲು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳು ಕಡ್ಡಾಯವಾಗಿ ಪ್ರತಿ ದಿನ ಗ್ರಾಮಗಳಿಗೆ ಭೇಟಿ ನೀಡುವಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಸೂಚಿಸಿದರು.

-ಬರ ಪರಿಸ್ಥಿತಿ ಕುರಿತು ಅವರು ಇಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಈ ಸೂಚನೆ ನೀಡಿದರು.

-ಸಮಸ್ಯೆ ಇರುವ ಗ್ರಾಮಗಳಲ್ಲಿ ಸ್ಥಳದಲ್ಲಿಯೇ ಪರಿಹಾರ ಒದಗಿಸಲು ಅಗತ್ಯ ತೀರ್ಮಾನ ಕೈಗೊಳ್ಳಲು ಅಧಿಕಾರ ನೀಡಲಾಗಿದ್ದು, ಜನ/ಜಾನುವಾರುಗಳಿಗೆ ಕುಡಿಯುವ ನೀರಿನ ಸರಬರಾಜು ಮತ್ತು ಮೇವಿನ ಸರಬರಾಜಿನಲ್ಲಿ ಯಾವುದೇ ವ್ಯತ್ಯಯ ಉಂಟಾಗಬಾರದು.

-ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಎಲ್ಲಾ ಜಿಲ್ಲೆಗಳಲ್ಲಿ 24x7 ಸಹಾಯವಾಣಿಗಳನ್ನು ತೆರೆಯಲಾಗಿದ್ದು, ಇವುಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುವಂತೆ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿಗಳು ತಿಳಿಸಿದರು.

-ಕೊಡಗು ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ನೆರೆ ಅನಾಹುತ ತಡೆಗಟ್ಟಲು ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಅವರು ಸೂಚಿಸಿದರು.

-ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಸಾಮಾನ್ಯವಾಗಿ 50 ರಿಂದ 60 ಲಕ್ಷ ಮಾನವ ದಿನಗಳು ಸೃಜನೆಯಾಗುತ್ತದೆ. ಆದರೆ ಈ ಬಾರಿ ಇದು 1.80 ಕೋಟಿ ಮಾನವ ದಿನಗಳಷ್ಟಾಗಿದೆ.

-ಕೆಲವು ಜಿಲ್ಲೆಗಳಲ್ಲಿ ಇನ್ನಷ್ಟು ಸಮುದಾಯ ಆಸ್ತಿ ಸೃಜನೆ ಕಾಮಗಾರಿಗಳನ್ನು ಕೈಗೊಳ್ಳುವ ಮೂಲಕ ಬರಪೀಡಿತ ಪ್ರದೇಶದ ಜನರಿಗೆ ಉದ್ಯೋಗ ಅವಕಾಶಗಳನ್ನು ಒದಗಿಸಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು.

-ಸಭೆಯಲ್ಲಿ ಕಂದಾಯ ಸಚಿವ ಆರ್.ವಿ.ದೇಶಪಾಂಡೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೃಷ್ಣ ಭೈರೇಗೌಡ, ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಅಭಿವೃದ್ಧಿ ಆಯುಕ್ತರಾದ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ: ಇ.ವಿ. ರಮಣರೆಡ್ಡಿ ,ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್.ಪ್ರಸಾದ್, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಬಸವರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ ಎಲ್.ಕೆ. ಅತೀಕ್ ಉಪಸ್ಥಿತರಿದ್ದರು.

*********************************