ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಕೋವಿಡ್ 19 ಕುರಿತಂತೆ ಮುಖ್ಯಮಂತ್ರಿ ಅವರು ದಿನಾಂಕ 26-3-2020 ರಂದು ಜಿಲ್ಲಾಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ನ ಮುಖ್ಯಾಂಶಗಳು

know_the_cm

(ವಿಧಾನಸೌಧ,ಬೆಂಗಳೂರು), ಮಾರ್ಚ್ 26, 2020

1. ರಾಜ್ಯದಲ್ಲಿ ಕೋವಿಡ್ 19 ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಗಳಲ್ಲಿ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳು ಮತ್ತು ಲಾಕ್ ಡೌನ್ ಪರಿಸ್ಥಿತಿಯನ್ನು ಅವಲೋಕಿಸಲು ಇಂದು ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು.

2. ಕೇಂದ್ರ ಗೃಹ ಸಚಿವಾಲಯವು ಹೊರಡಿಸಿರುವ ಮಾರ್ಗಸೂಚಿಗಳನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಜಾರಿಗೊಳಿಸುತ್ತಿದ್ದಾರೆ. ಈ ಕುರಿತು ಮುಖ್ಯಮಂತ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.

3. ಜನರು ಮನೆಯಲ್ಲೇ ಉಳಿಯುವಂತೆ ಮಾಡುವ ನಿಟ್ಟಿನಲ್ಲಿ ಹಲವು ಅಡ್ಡಿಗಳು ಎದುರಾಗಿದ್ದವು. ಈ ನಿಟ್ಟಿನಲ್ಲಿ ಇನ್ನಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

4. ರಸ್ತೆಗಳಲ್ಲಿ ಅನವಶ್ಯಕವಾಗಿ ಜನರು ಓಡಾಡುವುದನ್ನು ಸಂಪೂರ್ಣ ಸ್ಥಗಿತಗೊಳಿಸಬೇಕು. ಅಗತ್ಯ ಸೇವೆಗಳಿಗೆ ಸಂಬಂಧಿಸಿದ ವ್ಯಕ್ತಿಗಳ ಸಂಚಾರಕ್ಕೆ ಮಾತ್ರ ಅನುವು ಮಾಡಿ ಕೊಡುವಂತೆ ಮುಖ್ಯಮಂತ್ರಿಗಳು ತಿಳಿಸಿದರು.

5. ಬ್ಯಾಂಕ್ ಸಾಲ ಮತ್ತು ಕಿರು ಹಣಕಾಸು ಸಂಸ್ಥೆಗಳ ಸಾಲದ ಕಂತು ಪಾವತಿ ಮುಂದೂಡಲು ಕ್ರಮ ವಹಿಸುವಂತೆ ಮುಖ್ಯಮಂತ್ರಿಗಳು ಸರ್ಕಾರದ ಹಿರಿಯ ಅಧಿಕಾರಿಗಳಿಗೆ ಸೂಚಿಸಿದರು.

6. ಖಾಸಗಿ ಕ್ಲಿನಿಕ್ಗಳು ರಾಜ್ಯದಾದ್ಯಂತ ಕಡ್ಡಾಯವಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಲಾಯಿತು.

7. ರೈತರಿಗೆ ಕೃಷಿ ಬಳಕೆಗೆ ಅಗತ್ಯವಾದ ಕೀಟನಾಶಕ, ರಸಗೊಬ್ಬರ ಮತ್ತಿತರ ಕೃಷಿ ಪರಿಕರಗಳು ಲಭ್ಯವಾಗುವಂತೆ ಕ್ರಮ ವಹಿಸಲು ಮುಖ್ಯಮಂತ್ರಿಯವರು ಸೂಚಿಸಿದರು.

8. ಜಿಲ್ಲಾಧಿಕಾರಿಗಳ ಪಿ.ಡಿ. ಖಾತೆಯಲ್ಲಿ ಸಾಕಷ್ಟು ಅನುದಾನ ಲಭ್ಯವಿದ್ದು, ಅಗತ್ಯಕ್ಕೆ ತಕ್ಕಂತೆ ಖರ್ಚು ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.

9. ಜನರು ತಮ್ಮ ಮನೆಯ ಆಸುಪಾಸಿನಲ್ಲೇ ಅಗತ್ಯ ವಸ್ತುಗಳನ್ನು ಖರೀದಿಸಲು ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

10. ಇದರಿಂದ ಜನರಿಗೆ ತಮ್ಮ ಮನೆಯ ಬಳಿಯೇ ಅಗತ್ಯ ವಸ್ತುಗಳು ದೊರೆಯುವುದಲ್ಲದೆ, ಸಣ್ಣ ವ್ಯಾಪಾರಿಗಳಿಗೂ ಅನುಕೂಲವಾಗಲಿದೆ. ಜೊತೆಗೆ ನಗರದ/ ಪಟ್ಟಣದ ಕೇಂದ್ರ ಭಾಗಕ್ಕೆ ಭೇಟಿ ನೀಡುವವರ ಸಂಖ್ಯೆ ಕಡಿಮೆಯಾಗಲಿದೆ. ಆದರೆ ಇದೆಲ್ಲದರಲ್ಲಿಯೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ಎಚ್ಚರ ವಹಿಸಬೇಕೆಂದು ಸೂಚಿಸಿದರು.

11. ವೈದ್ಯರು, ದಾದಿಯರು, ಅರೆವೈದ್ಯಕೀಯ ಸಿಬ್ಬಂದಿ ಮತ್ತು ಸ್ವಚ್ಛತಾ ಕಾರ್ಯಗಳಲ್ಲಿ ತೊಡಗಿರುವವರಿಗೆ ಮನೆ/ ಪಿ.ಜಿ./ ಹಾಸ್ಟೆಲ್ ಮಾಲೀಕರಿಂದ ಯಾವುದೇ ರೀತಿಯ ಕಿರುಕುಳ ಆಗದಂತೆ ಎಚ್ಚರ ವಹಿಸಬೇಕೆಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

12. ಸರ್ಕಾರದ ಆದೇಶವನ್ನು ಉಲ್ಲಂಘಿಸಿದಲ್ಲಿ ಅಂತಹ ಮಾಲೀಕರ ವಿರುದ್ಧ ನಿದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

13. ಸೋಂಕಿನ ನಿರ್ವಹಣೆ ಕುರಿತಂತೆ ಒಟ್ಟಾರೆ ಪರಿಸ್ಥಿತಿ ನಿಯಂತ್ರಣದಲ್ಲಿದೆ. ನಮ್ಮ ಅಧಿಕಾರಿಗಳು, ವೈದ್ಯರು, ಅರೆ ವೈದ್ಯಕೀಯ ಸಿಬ್ಬಂದಿ, ನರ್ಸ್ಗಳು ಮತ್ತು ಪೌರ ಕಾರ್ಮಿಕರು ಕರೋನಾ ನಿವಾರಣೆಗೆ ಹಗಲಿರುಳೆನ್ನದೆ ಶ್ರಮಿಸುತ್ತಿದ್ದಾರೆ. ಅವರಿಗೆ ಅಗತ್ಯ ಸುರಕ್ಷತಾ ಉಪಕರಣಗಳನ್ನು ಒದಗಿಸಲು ಕ್ರಮ ವಹಿಸುವಂತೆ ತಿಳಿಸಿದರು.

14. ಎಲ್ಲ ಜಿಲ್ಲಾಧಿಕಾರಿಗಳೂ, ತಮ್ಮ ವ್ಯಾಪ್ತಿಯ ವೈದ್ಯಕೀಯ ಕಾಲೇಜುಗಳ ಸಹಕಾರ ಪಡೆಯುವಂತೆ ಮುಖ್ಯಮಂತ್ರಿಗಳು ನಿರ್ದೇಶನ ನೀಡಿದರು.

15. ಉಪ ಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ, ಡಾ. ಅಶ್ವತ್ಥ ನಾರಾಯಣ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಆರೋಗ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಮತ್ತು ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

*************